Spread the love

ಸಂಯುಕ್ತ ಟೈಮ್ಸ್, ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಮುಂದೆ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿ ಅನಾವರಣಗೊಂಡಿತು.

25 ಅಡಿ ಎತ್ತರದ ಬಾಪೂಜಿ ಪುತ್ಥಳಿಯನ್ನು ಚರಕ ನೇಯ್ಯುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆಗೊಳಿಸಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ‌. ಖಾದರ್, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ‌. ವೇಣುಗೋಪಾಲ್, ರಣದೀಪ ಸಿಂಗ್ ಸುರ್ಜೇವಾಲ, ಸಚಿವರಾದ ಹೆಚ್.ಕೆ. ಪಾಟೀಲ, ಡಾ. ಜಿ. ಪರಮೇಶ್ವರ, ಸತೀಶ ಜಾರಕಿಹೊಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅನಾರೋಗ್ಯದಿಂದ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಗಾಂಧೀಜಿ ಪ್ರತಿಮೆ ಉದ್ಘಾಟನೆ ಆಗುತ್ತಿದ್ದಂತೆ ಇತ್ತ ಸುವರ್ಣಸೌಧದ ಮುಂಭಾಗದಲ್ಲಿ ಸಿಡಿಮದ್ದುಗಳನ್ನು ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.

ಬಳಿಕ ಮಾತನಾಡಿದ ಖರ್ಗೆ, ನನ್ನ ಜೀವನವೇ ನನ್ನ ಸಂದೇಶ ಎಂದು ಸಾರುವ ಗಾಂಧೀಜಿ ಮೂರ್ತಿ ಇಡೀ ದೇಶಕ್ಕೆ ಗೌರವ. ಇಡೀ ಜಗತ್ತು ಗಾಂಧೀಜಿ ಅವರನ್ನು ಗೌರವಿಸುತ್ತದೆ. ಬೆಳಗಾವಿ ಇಡೀ ದೇಶಕ್ಕೆ ಗೌರವ ತಂದುಕೊಡುವ ಸ್ಥಳ. ಯಾಕೆಂದರೆ ಗಾಂಧೀಜಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಬೆಳಗಾವಿಯಲ್ಲಿ ಮಾತ್ರ. ಅಂತಹ ಮಹಾತ್ಮನ ಪುತ್ಥಳಿ ಉದ್ಘಾಟನೆ ನನ್ನ ಕೈಯಿಂದ ಆಗಿದ್ದಕ್ಕೆ ನನ್ನ ಜೀವನ ಧನ್ಯವಾಯಿತು ಎಂದರು.

Leave a Reply

Your email address will not be published. Required fields are marked *

You missed

error: Content is protected !!