ಸಂಯುಕ್ತ ಟೈಮ್ಸ್, ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ನ್ಯಾಯಾಲಯಗಳು ನೀಡಿರುವ ತಡೆಯಾಜ್ಞೆ ತೆರವುಗೊಳಿಸಿ, 60 ದಿನಗಳ ಒಳಗೆ ಆರೋಪಪಟ್ಟಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಜಾತಿ ದೌರ್ಜನ್ಯ ಪ್ರಕರಣಗಳಲ್ಲಿನ ಶಿಕ್ಷೆ ಪ್ರಮಾಣ 2020ರಲ್ಲಿ ಶೇ 10ರಷ್ಟು ಇತ್ತು. ಈಗ ಅದು ಶೇ 7ಕ್ಕೆ ಇಳಿದಿದೆ. ಆ ಪ್ರಮಾಣ ಶೇ 10ಕ್ಕೆ ಮುಟ್ಟಬೇಕು. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣದ ಬಗ್ಗೆ ಸರ್ಕಾರಿ ಅಭಿಯೋಜಕರು ಮತ್ತು ಪೊಲೀಸ್ ಇಲಾಖೆಯವರು ಪರಿಶೀಲನಾ ಸಭೆ ನಡೆಸಬೇಕು. ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೇ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು. ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ಸಲ್ಲಿಸಬೇಕು. ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ದಶಗಳಿಂದ ಶೇ.3ಕ್ಕಿಂತ ಹೆಚ್ಚಾಗಿಲ್ಲ. ಈ ಕಾರಣಕ್ಕೆ ಡಿಸಿಆರ್”ಇ ಸೆಲ್ ಗಳಿಗ ಪೊಲೀಸ್ ಠಾಣೆಯ ಶಕ್ತಿ ನೀಡಲಾಗಿದೆ. ಇನ್ನೂ ಶಿಕ್ಷಣ ಪ್ರಮಾಣ ಹೆಚ್ಚಾಗದಿದ್ದರೆ ಹೇಗೆ? ಪ್ರಕರಣಗಳ ತನಿಖೆಗೆ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು.
ಪರಿಶಿಷ್ಟ ಸಮುದಾಯದ ಜನರ ಕೊಲೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತನಿಖೆ ತಡ ಆದಷ್ಟೂ, ನ್ಯಾಯಾಲಯಗಳಲ್ಲಿ ವಿಚಾರಣೆ ತಡವಾಗಿ ಸಾಕ್ಷಿ ನಾಶ ಆಗುತ್ತದೆ. ಈ ಪ್ರಕರಣಗಳಲ್ಲಿ BURDEN OF PROOF ಆರೋಪಿಗಳ ಮೇಲಿರುತ್ತದೆ. ಆದ್ದರಿಂದ ಶಿಕ್ಷೆ ಪ್ರಮಾಣ ಹೆಚ್ಚಾಗಲೇಬೇಕು. ಆರೋಪ ಪಟ್ಟಿ ಶೀಘ್ರವಾಗಿ ಸಲ್ಲಿಸಿ ಸಾಕ್ಷ್ಯಗಳನ್ನು ಪರಿಣಾಮಕಾರಿಯಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ತಿಳಿಸಿದರು.

