ಸಂಯುಕ್ತ ಟೈಮ್ಸ್, ಬೆಂಗಳೂರು: ಗ್ರಾಮ ಪಂಚಾಯತ್ ಸದಸ್ಯರ ಒಕ್ಕೂಟ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವೃಂದದ ಸಂಘಗಳ ಎಲ್ಲ ಪ್ರತಿಭಟನಾನಿರತರು ತಮ್ಮ ತಮ್ಮ ಜಿಲ್ಲೆಗಳಿಗೆ ಹಿಂದಿರುಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಅ. 10ರಂದು ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಒಕ್ಕೂಟ ಹಾಗೂ ಇಲಾಖೆಯ ನೌಕರರ ವೃಂದದ ಸಂಘಗಳ ಪ್ರತಿನಿಧಿಗಳೊಂದಿಗೆ ಶನಿವಾರ ಸಭೆ ನಡೆಸಿದ್ದು, ಈ ಸಭೆ ಯಶಸ್ವಿಯಾಗಿದೆ ಎಂದಿದ್ದಾರೆ.
ಇಲಾಖೆಯ ನೌಕರರ ವೃಂದದ ಸಂಘಗಳ ಪ್ರತಿನಿಧಿಗಳ ಬೇಡಿಕೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಿದ್ದು, ಸರಕಾರದ ಕಡೆಯಿಂದ ಸಕಾರಾತ್ಮಕವಾಗಿ ಸ್ಪಂದಿಸಲಾಗಿದೆ. ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆದು, ಸೋಮ ವಾರದಿಂದ ಕರ್ತವ್ಯಕ್ಕೆ ಹಾಜರಾಗುವುದಾಗಿ ನೌಕರರು ತಿಳಿಸಿದ್ದಾರೆ.

